ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರಿಗೂ ಸಿಗಲಿದೆ 'ಗ್ಯಾರಂಟಿ': ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ. 2: ‘ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ(ಶಕ್ತಿ) ಸೇರಿದಂತೆ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೆ ಚಾಲನೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾರಿತ್ರಿಕ ಘೋಷಣೆ ಮಾಡಿದರು.
ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಯಾವುದೇ ಜಾತಿ-ಧರ್ಮ-ಲಿಂಗ-ಭಾಷೆಯ ಬೇಲಿ ಇಲ್ಲದೆ ರಾಜ್ಯದ ಸಮಸ್ತ ಕನ್ನಡಿಗರಿಗೆ ಈ ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ಪ್ರಕಟಿಸಿದರು.
‘ಚುನಾವಣೆ ಸಂದರ್ಭದಲ್ಲಿ ಮತ್ತು ಅದಕ್ಕೂ ಮುಂಚಿತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ನಾನು ಮತ್ತು ಪಕ್ಷದ ಅಧ್ಯಕ್ಷರು ರುಜು ಮಾಡಿದ ಗ್ಯಾರಂಟಿ ಕಾರ್ಡುಗಳನ್ನು ಕನ್ನಡ ನಾಡಿನ ಪ್ರತಿ ಮನೆಗೂ ತಲುಪಿಸಿದ್ದೆವು. ಅದರಂತೆಯೇ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಯೋಜನೆಗಳ ಅನುಷ್ಠಾನ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಅವರು ಪ್ರಕಟಿಸಿದರು.