ಬಿಜೆಪಿ ಟೀಕೆಗಳಿಗೆ ಡೋಂಟ್ ಕೇರ್: ಡಾ.ಪರಮೇಶ್ವರ್

ಉಡುಪಿ : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ. ಬಿಜೆಪಿ ಪಕ್ಷ ಎಂದಿಗೂ ಬಡವರ ಪರವಾಗಿ ಇರುವುದಿಲ್ಲ. ಹಾಗಾಗಿ ಅವರಿಗೆ ಬಡವರಿಗೆ ನೀಡುವ ಯೋಜನೆ ಇಷ್ಟ ಆಗುವುದಿಲ್ಲ. ಆದುದರಿಂದ ಬಿಜೆಪಿಯವರ ಟೀಕೆಗೆ ಕೇರ್ ಮಾಡಬೇಕಾಗಿಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು. ಕರಾವಳಿಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳಿಂದ ಯಾವುದೇ ಹೂಡಿಕೆದಾರರು ಇಲ್ಲಿ ಹಣ ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ ಎಂದು ಚೇಂಬರ್ ಆಫ್ ಕಾಮರ್ಸ್‌ನವರು ಹೇಳಿದ್ದಾರೆ. ಮುಂದೆ ಕೋಮು ಸಂಘರ್ಷ ಗಳಿಗೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಕಟ್ಟುನಿಟ್ಟಾಗಿ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಪರವಾಗಿ ಸನ್ಮಾನಿಸಲಾಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಎಂ.ಎ.ಗಫೂರ್, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ರಾಜಶೇಖರ್ ಕೋಟ್ಯಾನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ದೀಪಕ್ ಕೋಟ್ಯಾನ್, ಗೀತಾ ವಾಗ್ಳೆ, ಸರಳಾ ಕಾಂಚನ್, ದಿನಕರ ಹೇರೂರು, ನವೀನ್‌ಚಂದ್ರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು. ಅಣ್ಣಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.