ನೂತನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಜನರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಹೊಸ ಸರಕಾರ ಜಾರಿಗೊಳಿಸುತ್ತಿರುವ ನೂತನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಅಧಿಕಾರಿಗಳು ಮಾಡುವ ಮೂಲಕ ಕರ್ತವ್ಯದಲ್ಲಿನ ಕಾರ್ಯದಕ್ಷತೆಯನ್ನು ತೋರಬೇಕು. ಯಾವ ಕಾರಣಕ್ಕೂ ಉದಾಸೀನ ಮನೋಭಾವ ಸಹಿಸುವು ದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ರವಿವಾರ ಅಧಿಕಾರಿಗಳೊಂದಿಗೆ ನಡೆಸಿದ ಅನೌಪಾಚಾರಿಕ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರಕಾರವು ಜನಸಾಮಾನ್ಯರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದನ್ನು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸವಾಗಬೇಕು. ಇದೊಂದು ಅನೌಪಚಾರಿಕ ಸಭೆಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಆಳವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಮುಂಗಾರು ಮಳೆಯಿಂದ ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ಆಗದಂತೆ ಜಿಲ್ಲಾಡಳಿತ ಕಟ್ಟೆಚರ ವಹಿಸಬೇಕು. ವಿಕೋಪಗಳಿಂದಾಗುವ ಭೂಕುಸಿತ, ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿ, ವಿದ್ಯುತ್ ಪೂರೈಕೆಯ ಅಡಚಣೆ ಸಹಿತ ಮತ್ತಿತರ ಎಲ್ಲಾ ಸಮಸ್ಯೆಗಳನ್ನು ತಕ್ಷಣ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳ ಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರ, ಸರಾಗ ನೀರು ಹರಿಯುವಿಕೆಯನ್ನು ಅಧಿಕಾರಿಗಳು ಖಾತ್ರಿ ಪಡಿಸಬೇಕು, ಮೆಸ್ಕಾಂನಿಂದ ಯಾವುದೇ ಹಾನಿ ಸಂಭವಿಸಿದಂತೆ ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗೆ ತಾಕೀತು ಮಾಡಿದರು.
*ದ.ಕ.ಜಿಲ್ಲೆಯು ಅತ್ಯಂತ ಸೂಕ್ಷ್ಮ ಜಿಲ್ಲೆ. ಧರ್ಮ, ಜಾತಿಯ ಹೆಸರಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅನೈತಿಕ ಪೊಲೀಸ್‌ಗಿರಿ, ಬ್ಲಾಕ್‌ಮೇಲ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ನಿಷ್ಪಕ್ಷಪಾತವಾಗಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಕುಮಾರ್ ಜೈನ್ ಮಾತನಾಡಿ, ನಗರದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚನೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ಸಿದ್ಧಪಡಿಸುವ ಕೆಲಸವಾಗುತ್ತಿದೆ. ಸಂಜೆ 5ರ ನಂತರ ನಗರದ ಪ್ರಮುಖ ಸ್ಥಳಗಳು, ರಸ್ತೆಗಳಲ್ಲಿ ಪೊಲೀಸರ ನಿಯೋಜನೆ ಮಾಡುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ವೇದಿಕೆಯಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಹರೀಶ್ ಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಪಂ ಸಿಇಒ ಡಾ. ಕುಮಾರ್, ಜಿಲ್ಲಾ ಎಸ್ಪಿ ರಿಷ್ಯಂತ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರರಿದ್ದರು.