ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಿಂದ ದೇಶದ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ವಿದ್ಯಾಭ್ಯಾಸ ದಿಂದ ವಂಚಿತರಾಗಿ ದಾರಿ ತಪ್ಪಲಿದ್ದು, ಇದ ರಿಂದ ದೇಶದ ಯುವ ಸಂಪತ್ತು ವ್ಯರ್ಥವಾಗುವುದರಿಂದ ದೇಶದ ಅಭಿವೃದ್ಧಿಗೆ ತೊಡಕಾಗಲಿದೆ. ಆದ್ದರಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ಸೋಮವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಇದರಲ್ಲಿ ತೊಡಗಿರುವ ಬಾಲಕರನ್ನು ರಕ್ಷಿಸಿ ಅವರಿಗೆ ಸೂಕ್ತ ಪುರ್ನವಸತಿ ಮತ್ತು ಶಿಕ್ಷಣವನ್ನು ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕು. ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬಾಲ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಅಲ್ಲಿಂದ ರಕ್ಷಿಸಿ, ಸೂಕ್ತ ಪುರ್ನವಸತಿ ಮತ್ತು ಶಿಕ್ಷಣ ಹಾಗೂ ಮಾರ್ಗದರ್ಶನ ನೀಡುವ ಕಾರ್ಯವನ್ನು ಆದ್ಯತೆ ನೆಲೆಯಲ್ಲಿ ಕೈಗೊಳ್ಳುವಂತೆ ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಂತೆ ಪ್ರತಿಜ್ಞಾ ವಿಧಿ ಬಧಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಮಕ್ಕಳಿಗೆ ಅವರ ಬಾಲ್ಯವನ್ನು ಸಂತೋಷದಿಂದ ಅನುಭವಿಸಲು ಅವಕಾಶ ಕಲ್ಪಿಸಬೇಕು. ಬಡತನ, ಅನಕ್ಷರತೆ ಹಾಗೂ ಕಾನೂನು ಅರಿನ ಕೊರತೆಯಿಂದ ಬಾಲ ಕಾರ್ಮಿಕ ಪದ್ಧತಿ ಕಂಡು ಬರುತ್ತಿದೆ. 14 ವರ್ಷದೊಳಗಿನ ಮಕ್ಕಳನ್ನು ಕಾರ್ಮಿಕರ ನ್ನಾಗಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಮಕ್ಕಳು ಕಂಡುಬಂದಲ್ಲಿ 1098 ಉಚಿತ ಸಹಾಯ ವಾಣಿಗೆ ಕರೆ ಮಾಡಿ ತಿಳಿಸಬಹುದು ಎಂದರು.
ಜಿಲ್ಲಾ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕ ನಾಗರಾಜ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ನಮ್ಮ ಸುತ್ತಮುತ್ತಲು ಬಾಲ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದರೆ ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ (ಪ್ರಭಾರ) ಕಾವೇರಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯ ನ್ನಾಗಿಸಲು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಅರಿವು ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೈಗಾರಿಕೆಗಳಲ್ಲಿ ತಪಾಸಣೆ ಕಾರ್ಯಗಳನ್ನು ಹಾಗೂ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಬಾಲ ಕಾರ್ಮಿಕ ಯೋಜನಾ ಸಂಘದ ಸದಸ್ಯ ಹಾಗೂ ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟು ಪ್ರಸ್ತುತ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ನಡೆದ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ನಿರ್ದೇಶಕಿ ಅಮೃತಾ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.