ಜೂ.21: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು,ಜೂ.16: ದ.ಕ.ಜಿಲ್ಲಾದ್ಯಂತ ಜೂ.21ರಂದು ಹಮ್ಮಿಕೊಳ್ಳಲಾಗಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್‌ರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರ, ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು, ವಿವಿಧ ಇಲಾಖೆಗಳು, ವಿವಿಧ ಯೋಗ ಸಂಘಟನೆಗಳ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯ ಕಾರ್ಯಕ್ರಮ ನಗರದ ಪುರಭವನದ ಮಿನಿ ಸಭಾಂಗಣದಲ್ಲಿ ಬೆಳಗ್ಗೆ 8ಕ್ಕೆ ನಡೆಯಲಿದೆ ಎಂದರು.
ಯೋಗ ಪ್ರದರ್ಶನ ಉತ್ತಮವಾಗಿ ಮೂಡಿಬರಲು ಅನುಕೂಲವಾಗುವಂತೆ ಪೂರ್ವಭಾವಿಯಾಗಿ ತಾಲೀಮು ನಡೆಸಬೇಕು. ಯೋಗ ದಿನಾಚರಣೆಗೆ ಅಗತ್ಯವಿರುವ ಶಾಲಾ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ಸಂಯೋಜಕರು, ವೆಲ್‌ನೆಸ್ ಸೆಂಟರ್‌ಗಳ ಯೋಗಪಟುಗಳನ್ನು ಆಹ್ವಾನಿಸಬೇಕು ಎಂದರು.
ದ.ಕ.ಜಿಪಂ ಸಿಇಒ ಡಾ. ಕುಮಾರ, ದ.ಕ.ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಎಸ್ಪಿ ರಿಷ್ಯಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಉಪಸ್ಥಿತರಿದ್ದರು.