ಮಂಗಳೂರು: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಗಳೂರು : ಚುನಾವಣೆಯ ಸಂದರ್ಭ ಮಾಸಿಕ 10 ಕೆಜಿ ಅಕ್ಕಿಯನ್ನು ಉಚಿತ ನೀಡುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡರು ಅಧಿಕಾರಕ್ಕೆ ಬಂದ ಬಳಿಕ ಕೇಂದ್ರ ಸರಕಾರ ಅಕ್ಕಿ ನೀಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುತ್ತಿರುವುದು ಖಂಡನೀಯ. ಕಾಂಗ್ರೆಸ್ ತನ್ನ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ನ ಈ ವಂಚನೆಗಳನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಗೊಂದಲ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ಘಟಕದ ವತಿ ಯಿಂದ ಕಾಂಗ್ರೆಸ್ ವಿರುದ್ಧ ನಗರದ ಮಿನಿ ವಿಧಾನಸೌಧ ಮುಂದೆ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತನ್ನ ವೈಫಲ್ಯಗಳನ್ನು ಮರೆಮಾಚಲು ರಾಜ್ಯ ಕಾಂಗ್ರೆಸ್ ಸರಕಾರವು ಪ್ರಧಾನಿ ನರೇಂದ್ರ ಮೋದಿಯ ಮೇಲೆ ಆರೋಪ ಮಾಡುತ್ತಿದೆ. ಕೇಂದ್ರ ಸರಕಾರ ಈಗಾಗಲೇ 5 ಕೆ.ಜಿ. ಅಕ್ಕಿ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ 15 ಕೆ.ಜಿ. ಅಕ್ಕಿ ವಿತರಣೆ ಮಾಡಲಿ ಎಂದು ವೇದವ್ಯಾಸ ಕಾಮತ್ ಸವಾಲು ಹಾಕಿದರು. ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿದರು.
ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ ಬಂಟ್ವಾಳ, ಮುಖಂಡ ರಾದ ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ್, ಸಂತೋಷ್ ರೈ ಬೋಳಿಯಾರ್, ಸತೀಶ ಕುಂಪಲ, ಗಣೇಶ ಹೊಸಬೆಟ್ಟು, ಪ್ರಭಾಮಾಲಿನಿ, ಪೂಜಾ ಪೈ, ಜಗದೀಶ ಶೇಣವ, ರಾಜಗೋಪಾಲ ರೈ, ತಿಲಕ್ರಾಜ್ ಕೃಷ್ಣಾಪುರ, ವಿಜಯಕುಮಾರ್ ಶೆಟ್ಟಿ, ಈಶ್ವರ ಕಟೀಲು, ರಾಜೇಂದ್ರ ಪಾಲ್ಗೊಂಡಿದ್ದರು.