ಪಶ್ಚಿಮ ಬಂಗಾಳದಲ್ಲಿ ಕೇಂದ್ರೀಯ ಅರೆಸೇನಾ ಪಡೆಗಳ ನಿಯೋಜನೆ: ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂ ನಕಾರ

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಅವಧಿಯಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ಕಲ್ಕತ್ತಾ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಜುಲೈ 8ರ ಪಂಚಾಯತ್ ಚುನಾವಣೆಗೆ ಮುನ್ನ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರೀಯ ಅರೆಸೈನಿಕ ಪಡೆಗಳನ್ನು ನಿಯೋಜಿಸುವಂತೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಕಳೆದ ವಾರ ಆದೇಶ ನೀಡಿತ್ತು. ಪ್ರತಿಪಕ್ಷ ನಾಯಕರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿತ್ತು. ಹಿಂಸಾಚಾರದಿಂದಾಗಿ ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಸಾಧ್ಯವಾಗಿದೆ ಎಂದು ಪ್ರತಿಪಕ್ಷ ನಾಯಕರು ದೂರಿದ್ದರು.
ಮಂಗಳವಾರ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವೊಂದು ತಿರಸ್ಕರಿಸಿತು.
‘‘ಹೈಕೋರ್ಟ್ ಆದೇಶದ ಅಂತಿಮ ಆಶಯ ಮುಕ್ತ ಮತ್ತು ನ್ಯಾಯೋಚಿತ ಚುನಾವಣೆ ನಡೆಯಬೇಕೆನ್ನುವುದಾಗಿದೆ’’ ಎಂದು ನ್ಯಾಯಾಧೀಶರು ಹೇಳಿದರು.
ರಾಜ್ಯ ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯೋಚಿತ ಚುನಾವಣೆಯ ಬಗ್ಗೆ ಗಮನಹರಿಸಬೇಕೇ ಹೊರತು, ಯಾವ ಪಡೆಗಳನ್ನು ನಿಯೋಜಿಸಲಾಗುತ್ತದೆ ಎಂಬ ಬಗ್ಗೆಯಲ್ಲ ಎಂದು ನ್ಯಾಯಾಧೀಶರು ಹೇಳಿದರು.
ಜೂನ್ 9ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಂದಿನಿಂದ ರಾಜ್ಯದಲ್ಲಿ ಹಲವಾರು ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ಹಿಂಸಾಚಾರದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.







