ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವು
ಬೆಂಗಳೂರು, ಜ.23: ಯುವಕನೋರ್ವ ಬಹುಮಹಡಿ ಕಟ್ಟಡದಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕೋಣನಕುಂಟೆ ನಿವಾಸಿ ಸುನೀಲ್(27) ಮೃತ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ. ಕಳೆದ 8 ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದ ಸುನೀಲ್, ಗ್ಲಾಸ್ ಕಟಿಂಗ್ ಕೆಲಸ ಮಾಡುತ್ತಿದ್ದ. ಬುಧವಾರ ಸಂಜೆ 5.30ರ ಸುಮಾರಿಗೆ ಕಟ್ಟಡದಿಂದ ನಿಯಂತ್ರಣ ತಪ್ಪಿ ಬಿದ್ದು, ತೀವ್ರ ಗಾಯಗೊಂಡಿದ್ದ. ಬಳಿಕ, ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸುನೀಲ್ ಸಾವಿಗೆ ನಿರ್ಲಕ್ಷವೇ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸುನೀಲ್ ಪೋಷಕರು, ಮೃತದೇಹವನ್ನು ಕಟ್ಟಡದ ಮುಂಭಾಗದಲ್ಲಿಟ್ಟು ಪ್ರತಿಭಟನೆ ನಡೆಸಿದರು. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
Next Story