ನೂತನ ಸಿಎಂ ಆಯ್ಕೆ: ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಜು.27: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನೂತನ ನಾಯಕನ ಆಯ್ಕೆ ಸಂಬಂಧ ಇಂದು (ಜು.27) ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಮಂಗಳವಾರ ಸಂಜೆ 7 ಗಂಟೆಗೆ ನಗರದ ರಾಜಭವನ ರಸ್ತೆಯ ಕ್ಯಾಪಿಟಲ್ ಹೊಟೇಲ್ ನಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಈ ಸಭೆಯಲ್ಲಿ ಬಿಜೆಪಿಯ ಎಲ್ಲ ಶಾಸಕರಿಗೆ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನೂತನ ನಾಯಕನ ಆಯ್ಕೆಗೆ ಬಿಜೆಪಿ ಸಂಸದೀಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಜಿ.ಕೃಷ್ಣಾರೆಡ್ಡಿಯವರನ್ನು ಪಕ್ಷದ ವರಿಷ್ಠರು ನೇಮಿಸಿದ್ದು, ಅವರು ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಅವರು ಇಂದು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಆ ಬಳಿಕ ನೂತನ ಮುಖ್ಯಮಂತ್ರಿಯನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆಗಳಿವೆ.