ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು, ಆ.26: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದದಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.
ಈದ್ಗಾ ಮೈದಾನದ ಮಾಲೀಕತ್ವ ಕುರಿತು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠ, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ.
ಅಲ್ಲದೆ, ಗಣೇಶೋತ್ಸವ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಅಧಿಕಾರವನ್ನು ರಾಜ್ಯ ಸರಕಾರದ ವಿವೇಚನೆಗೆ ಬಿಟ್ಟಿದೆ. ಆ.31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್ ಅನುಮತಿ ನೀಡಿದೆ. ಆ.25ರಂದೇ ಈ ಕೇಸ್ನ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ, ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದ ವೇಳೆ ರಾಷ್ಟ್ರ ಧ್ವಜಾರೋಹಣ, ಮಕ್ಕಳ ಆಟಕ್ಕೆ ಅವಕಾಶ, ಮುಸ್ಲಿಂ ಹಬ್ಬಗಳ ವೇಳೆ ಪ್ರಾರ್ಥನೆಗೆ ಅವಕಾಶವನ್ನಷ್ಟೇ ನೀಡಲು ಆದೇಶಿಸಿದ್ದರು.
ಇದನ್ನೂ ಓದಿ... ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ; BDA ಆಯುಕ್ತ ಎಂ.ಬಿ.ರಾಜೇಶ್ ಗೌಡ ವರ್ಗಾವಣೆ
ಕೆಲವು ದಿನಗಳ ಹಿಂದಷ್ಟೇ ಚಾಮರಾಜಪೇಟೆ ಈದ್ಗಾ ಮೈದಾನದ ಆಸ್ತಿ ವಿವಾದ ಬಗೆಹರಿದಿತ್ತು. ರಾಜ್ಯ ವಕ್ಫ್ ಬೋರ್ಡ್ಗೆ ಸೇರಿದ ಆಸ್ತಿ ಎಂಬ ವಾದ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿದ ಬಿಬಿಎಂಪಿ, ಈ ಆಸ್ತಿಯು ಕಂದಾಯ ಇಲಾಖೆಗೆ ಸೇರಿದ್ದು ಎಂದು ಸ್ಪಷ್ಟಪಡಿಸಿತ್ತು. ಈ ನಡುವೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವಕ್ಕೆ ಮಾತ್ರ ಅವಕಾಶ ನೀಡೋದಾಗಿ ಹೇಳಿದ್ದರು.
►ಗಣೇಶೋತ್ಸವಕ್ಕೆ ಅನುಮತಿ, ಸರಕಾರದ ವಿವೇಚನೆಗೆ ಬಿಟ್ಟ ಕೋರ್ಟ್
ಗಣೇಶೋತ್ಸವ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಅಧಿಕಾರವನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಸರಕಾರದ ವಿವೇಚನೆಗೆ ಬಿಟ್ಟಿದೆ.
------------------------------------------------------
ಹುಬ್ಬಳ್ಳಿ ಈದ್ಗಾದಲ್ಲೂ ಗಣೇಶೋತ್ಸವಕ್ಕೆ ಅವಕಾಶ ಕಲ್ಪಿಸಿ: ಮುತಾಲಿಕ್
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದೇ ತಡ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಇದೇ ಮಾದರಿಯಲ್ಲಿ ಅನುಮತಿ ಸಿಗಬೇಕು ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಸರಕಾರದ ನಿಲುವಿಗೆ ಜಯ: ಆರ್.ಅಶೋಕ್
ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಹೊರಬಿದ್ದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಬಿಜೆಪಿ ಸರಕಾರದ ನಿಲುವಿಗೆ ಪೂರಕವಾಗಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ, ಸರಕಾರದ ನಿಲುವಿಗೆ ಜಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.