ಬೆಂಗಳೂರಿನಲ್ಲಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು
ಬೆಂಗಳೂರು, ಜ.20: ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಕಳೆದ ಮೂರುದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆ ಸಾವನ್ನಪ್ಪಿರುವುದು ವರದಿಯಾಗಿದೆ.
ಶಿಕಾರಿಪುರದ ನೀಲಮ್ಮಾ ಮೃತ ಅಂಗನವಾಡಿ ಕಾರ್ಯಕರ್ತೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಅಂಗನವಾಡಿ ಕಾರ್ಯಕರ್ತೆಯೊಬ್ಬರು, ಕಳೆದ ಮೂರುದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ನೀಲಮ್ಮಾ ಪಾಲ್ಗೊಂಡಿದ್ದರು.ಆದರೆ, ಅವರಿಗೆ ಚಳಿ, ಜ್ವರ ಕಂಡಬಂದ ಹಿನ್ನೆಲೆ ನಿನ್ನೆ ಶಿವಮೊಗ್ಗಕ್ಕೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ವಶಕ್ಕೆ: ಮತ್ತೊಂದೆಡೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನೆಗೆ ನೀಡಿದ್ದ ಕಾಲಾವಕಾಶ ಮುಗಿದಿದೆ. ಸ್ಥಳದಿಂದ ಹೋಗುವಂತೆ ಕೋರಿದರು. ಅದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಬಳಿಕ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಗಳಲ್ಲಿ ಕರೆದೊಯ್ದರು.