ನ.29ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಹಲವು ಮುಖಂಡರು ಭಾಗಿ
ಉಡುಪಿ, ನ.28: ಕೆಪಿಸಿಸಿ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್, ಗ್ರಾಪಂ ಚುನಾವಣೆ ಪೂರ್ವ ತಯಾರಿಯಾಗಿ ನ.29ರಂದು ಪೂರ್ವಾಹ್ನ 11 ಗಂಟೆಗೆ ಉಡುಪಿ ಮಿಷನ್ ಕಂಪೌಂಡಿನ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಲತಾ ಅಮರನಾಥ್, ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಮೊದಲಾದ ಗಣ್ಯರು ಭಾಗವಹಿಸಲಿರು ವರು. ಕೊರೋನ ಹಿನ್ನೆಲೆಯಲ್ಲಿ ಸೀಮಿತ ಸಂಖ್ಯೆಯಲ್ಲಿ ಪ್ರಮುಖ ಕಾರ್ಯಕರ್ತರು ಮಾತ್ರ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಇಂದು ಉಡುಪಿ ಜಿಲ್ಲೆಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್, ನ.29ರಂದು ಬೆಳಗ್ಗೆ 8 ಗಂಟೆಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಿಯ ದರ್ಶನ ಪಡೆದು, ಉಡುಪಿಗೆ ಆಗಮಿಸಲಿದ್ದಾರೆ. ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ, ಅಪರಾಹ್ನ 2 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಬ್ಲಾಕ್ ಅಧ್ಯಕ್ಷರುಗಳ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಪಾಲ್ಗೊಂಡು, ಸಂಜೆ 4:30ಕ್ಕೆ ಉಡುಪಿ ಯಿಂದ ನಿಗರ್ಮಿಸಲಿರುವರು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್, ಕಾರ್ಯದರ್ಶಿಗಳಾದ ಕೀರ್ತಿ ಶೆಟ್ಟಿ, ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.