ಉಡುಪಿ: ಜಿಲ್ಲೆಯಲ್ಲಿ ರವಿವಾರ 16 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಫೆ.28: ರವಿವಾರ ಜಿಲ್ಲೆಯ ಒಟ್ಟು 16 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 12 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 73ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಏಳು ಮಂದಿ ಪುರುಷರಾದರೆ ಉಳಿದ 9 ಮಂದಿ ಮಹಿಳೆಯರು. ಇವರಲ್ಲಿ 10 ಮಂದಿ ಉಡುಪಿ ತಾಲೂಕಿನವರಾದರೆ, ಇಬ್ಬರು ಕುಂದಾಪುರ ಮತ್ತು ನಾಲ್ವರು ಕಾರ್ಕಳ ತಾಲೂಕಿನವರು. 13 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 12 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,348ಕ್ಕೇರಿದೆ.
1500 ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ 1519 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1500 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 19 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,611 ಆಗಿದೆ ಎಂದು ಡಾ.ಸೂಡ ವಿವರಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,67,423 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,43,812 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 190 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.