ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ: ಬಿಜೆಪಿಯಿಂದ ವೈದ್ಯರು, ವೈದ್ಯ ಸಿಬ್ಬಂದಿಗಳಿಗೆ ಸನ್ಮಾನ
ಉಡುಪಿ, ಅ.22: ದೇಶಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ಗಳನ್ನು ವಿತರಿಸಿ ಹೊಸ ಮೈಲುಗಲ್ಲು ದಾಟಿರುವ ಸಂಭ್ರಮವನ್ನು ತನ್ನ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಚರಿಸಿದ ಜಿಲ್ಲಾ ಬಿಜೆಪಿಯ ನಾಯಕರು, ಇಂಥ ಸಾಧನೆಗೆ ಕಾರಣರಾದ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಉಪಸ್ಥಿತರಿದ್ದರು.