ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಂಸದ ನಳಿನ್ ಸೂಚನೆ
ಮಂಗಳೂರು, ಅ.25: ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಸದ ನಳಿನ್ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಗಳೂರು ನಗರದ ಸ್ಮಾರ್ಟ್ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ಮಾಟ್ಸಿಟಿ ಯೋಜನೆಯಡಿ ರಸ್ತೆಗಳ ಅಭಿವೃದ್ಧಿ ಹಾಗೂ ವಿವಿಧ ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಗಳಾದಂತೆ ಎಚ್ಚರ ವಹಿಸಬೇಕು. ಕಾಮಗಾರಿಗಳನ್ನು ನಿಗದಿ ಪಡಿಸಿದ ಕಾಲಮಿತಿ ಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಅರ್ಪಿಸಬೇಕು. ಈ ಯೋಜನೆಯ ಕಾಮಗಾರಿಗಳಿಗಾಗಿ ಮಂಜೂರಾದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಸ್ಥಳದಲ್ಲಿದ್ದು, ಕಾಮಗಾರಿಯ ಮೇಲ್ವಿಚಾರಣೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ನಗರದ ಎ.ಬಿ. ಶೆಟ್ಟಿ ಸರ್ಕಲ್ ಮುಖಾಂತರ ಹಾದು ಹೋಗುವ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಒದಗಿಸಬೇಕು. ಈ ಕುರಿತ ಸೂಚನಾಫಲಕಗಳನ್ನು ಕೂಡಲೇ ಅಳವಡಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.
ಈ ವೇಳೆ ವಾಟರ್ ಫ್ರಂಟ್ ಯೋಜನೆ, ಮಂಗಳಾ ಕ್ರಾನಿಕ್ ರಸ್ತೆ ಮತ್ತು ಇತರ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಟಿಪಿ ಯೋಜನೆ ಯನ್ನು ಬಳಸಿಕೊಂಡು ಜಲಾಭಿಮುಖ ಪ್ರದೇಶದ ಸಮಗ್ರ ಅಭಿವೃದ್ಧಿ, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆ ಹಾಗೂ ಇನ್ನಿತರ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಜಿಪಂ ಸಿಇಒ ಡಾ.ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.