ಉಡುಪಿ ಜಿಲ್ಲೆಯ ಎಂಟು ಮಂದಿ ಕೋವಿಡ್ಗೆ ಪಾಸಿಟಿವ್
ಉಡುಪಿ, ಅ. 28: ಜಿಲ್ಲೆಯಲ್ಲಿ ಇಂದು ಒಟ್ಟು ಎಂಟು ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ. ದಿನದಲ್ಲಿ 14 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 40ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಸೋಂಕು ದೃಢಪಟ್ಟ ಎಂಟು ಮಂದಿಯಲ್ಲಿ ಮೂವರು ಪುರುಷರು ಹಾಗೂ ಐವರು ಮಹಿಳೆಯರು. ಇವರಲ್ಲಿ ನಾಲ್ವರು ಉಡುಪಿ ತಾಲೂಕಿನವರಾದರೆ, ಒಬ್ಬರು ಕುಂದಾಪುರ ತಾಲೂಕಿನವರು. ಮೂವರು ಹೊರಜಿಲ್ಲೆಯಿಂದ ಬಂದವರಾಗಿದ್ದಾರೆ. ಇವರಲ್ಲಿ ಐದು ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಮೂವರಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ.
ಗುರುವಾರ 14 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,162ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2931 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,678ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 12,12,539 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
2,449 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 2,449 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದು, ಇವರಲ್ಲಿ 273 ಮಂದಿ ಮೊದಲ ಡೋಸ್ ಹಾಗೂ 2176 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 189 ಮಂದಿ ಮೊದಲ ಡೋಸ್ ಹಾಗೂ 1497 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 84 ಮಂದಿ ಮೊದಲ ಡೋಸ್ ಹಾಗೂ 667 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. 10 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 9,18,472 ಮಂದಿ ಮೊದಲ ಡೋಸ್ ಲಸಿಕೆ ಹಾಗೂ 5,12,529 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ.