ಆಡಳಿತದಲ್ಲಿ ಬಿಎಸ್ವೈ ಕುಟುಂಬದ ಸದಸ್ಯರ ಹಸ್ತಕ್ಷೇಪ ಇಲ್ಲ: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ಬೆಂಗಳೂರು, ಜ. 5: ರಾಜ್ಯ ಸರಕಾರದ ಆಡಳಿತದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಯಾವೊಬ್ಬ ಸದಸ್ಯನೂ ಹಸ್ತಕ್ಷೇಪ ಮಾಡಿಲ್ಲ. ಇದೆಲ್ಲ ಕೇವಲ ಊಹಾಪೋಹ ಅಷ್ಟೇ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಇಂದಿಲ್ಲಿ ಸಮರ್ಥಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಸ್ವಾರ್ಥಕ್ಕಾಗಿ ಅವರ ವಿರುದ್ಧ ಆರೋಪ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಆಕ್ಷೇಪಿಸಿದರು.
ಪಕ್ಷದ ಶಾಸಕರ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಎರಡು ದಿನಗಳಿಂದ ನಡೆಸಿದ ಸಭೆ ಯಶಸ್ವಿಯಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕೆಂಬ ಸಲಹೆಯನ್ನು ಶಾಸಕರು ನೀಡಿದ್ದಾರೆ. ಶಾಸಕರ ಸಲಹೆಗಳನ್ನು ಯಡಿಯೂರಪ್ಪನವರು ಸ್ವೀಕರಿಸಿದ್ದಾರೆ ಎಂದರು.
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ. ಹೀಗಾಗಿ ಕ್ಷೇತ್ರಗಳ ಅಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹಣ ಬಿಡುಗಡೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ರೇಣುಕಾಚಾರ್ಯ ತಿಳಿಸಿದರು.
ಎಚ್ಚರಿಕೆ: ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೀಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ತಾಳ್ಮೆಯಿಂದ ಕಾಯುವಂತೆ ವರಿಷ್ಠರು ಸೂಚಿಸಿದ್ದಾರೆ. ಕಾಲ ಕೂಡಿ ಬಂದಾಗ ಎಲ್ಲವೂ ಸರಿಯಾಗಲಿದೆ ಎಂದು ಅವರು ತಿಳಿಸಿದರು.