ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ನೇಮಕ ಪ್ರಶ್ನಿಸಿ ಪಿಐಎಲ್: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜ.11: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಈ ಕುರಿತು ನಗರದ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಅರ್ಜಿಗೆ ಫೆ.3ರೊಳಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿತು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಫೆ.3ರೊಳಗೆ ಆಕ್ಷೇಪಣೆ ಸಲ್ಲಿಸಬೇಕು. ಆಕ್ಷೇಪಣೆ ಸಲ್ಲಿಸಲು ಇದೇ ಕಡೆಯ ಅವಕಾಶವೆಂದು ತಿಳಿಸಿ, ವಿಚಾರಣೆಯನ್ನು ಫೆ.5ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ: ಎನ್.ಆರ್.ಸಂತೋಷ್ ಅವರನ್ನು ಕಾನೂನು ಬಾಹಿರವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ನಿಯಮದ ಪ್ರಕಾರ ಖಾಸಗಿ ವ್ಯಕ್ತಿಗೆ ಸಿಎಂ ಕಾರ್ಯದರ್ಶಿ ಹುದ್ದೆ ಹಾಗೂ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡುವಂತಿಲ್ಲ. ಆದರೂ ಸರಕಾರ ಎನ್.ಆರ್.ಸಂತೋಷ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದು ಕಾನೂನು ಬಾಹಿರವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಈ ನೇಮಕದಿಂದ ಸಾರ್ವಜನಿಕರ ತೆರಿಗೆ ಹಣವನ್ನು ಅನಗತ್ಯವಾಗಿ ವ್ಯಯಿಸಲಾಗುತ್ತಿದೆ. ಹೀಗಾಗಿ, ನ್ಯಾಯಾಲಯ ಎನ್.ಆರ್.ಸಂತೋಷ್ ನೇಮಕ ಆದೇಶಕ್ಕೆ ಸಂಬಂಧಿಸಿದ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಬೇಕು ಹಾಗೂ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ತಿಳಿಸಲಾಗಿದೆ.