ಹುಣಸೋಡು ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ಬೆಂಗಳೂರು, ಜ.22: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಕಲ್ಲು ಗಣಿಗಾರಿಕೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿನ್ನೆ ತಡರಾತ್ರಿಯೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿನ್ನೆ ತಡರಾತ್ರಿಯೇ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದು, ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (2/2)
— CM of Karnataka (@CMofKarnataka) January 22, 2021