ನ್ಯಾಯ ವಿಜ್ಞಾನ ಪ್ರಯೋಗಾಲಯ ಉನ್ನತೀಕರಿಸಲು ಆದ್ಯತೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು, ಆ. 25: ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉನ್ನತೀಕರಿಸಲು ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಕೋರಮಂಗಲದ ಕೆಎಸ್ಆರ್ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಚಾರಿ ಫೋರೆನ್ಸಿಕ್ ಪ್ರಯೋಗಾಲಯಗಳಿಗೂ ಇಂದು ಚಾಲನೆ ನೀಡಲಾಗಿದೆ. ಆಡುಗೋಡಿಯಲ್ಲಿ ಪೊಲೀಸ್ ಇಲಾಖೆಯ ನೂರು ಎಕರೆ ಜಾಗವಿದ್ದು, ಅಲ್ಲಿ ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಪ್ರಾರಂಭಿಸುವ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಪೊಲೀಸರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ನಾಗರಿಕರು ನೆಮ್ಮದಿಯ ಬದುಕು ನಡೆಸಲು ಹಗಲಿರುಳು ಪೊಲೀಸರು ಎಚ್ಚರವಾಗಿದ್ದು, ರಕ್ಷಣೆ ಮಾಡಬೇಕಾಗಿದೆ. ರಾಷ್ಟ್ರದ ಗಡಿ ಕಾಯುವ ಸೈನಿಕರಿಗೆ ತಮ್ಮ ಶತ್ರುಗಳ ಬಗ್ಗೆ ಅರಿವಿರುತ್ತದೆ. ಆದರೆ, ನಾಡಿನಲ್ಲಿ ಸೇವೆ ಸಲ್ಲಿಸುವ ಪೊಲೀಸರಿಗೆ ಅಂತಹ ಮಾಹಿತಿ ಇರುವುದಿಲ್ಲ. ಒಂದು ರೀತಿಯಲ್ಲಿ ಸವಾಲಿನ ಕೆಲಸವನ್ನು ಪೊಲೀಸರು ನಿಭಾಯಿಸಬೇಕಾಗಿದೆ ಎಂದು ಆರಗ ಜ್ಞಾನೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.
ಪೊಲೀಸರು ಮತ್ತು ಅವರ ಕುಟುಂಬದವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯದಲ್ಲಿ ಮಾದಕ ವಸ್ತು ಮೂಲೋತ್ಪಾಟನೆ ಮಾಡಲು ನಿರ್ಧಾರ ಮಾಡಲಾಗಿದೆ. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರಗ ಜ್ಞಾನೇಂದ್ರ ಇದೇ ವೇಳೆ ಸ್ಪಷ್ಟಣೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಬಿಟಿಎಂ ಲೇಔಟ್ ಹಾಲಿ ಶಾಸಕ ರಾಮಲಿಂಗಾರೆಡ್ಡಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್, ರಾಜ್ಯ ಅಪರ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ಕುಮಾರ್, ಡಾ.ಎ.ಎಸ್.ಎನ್.ಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಶಿಕ್ಷಿತರಿಂದಲೇ ಅಪರಾಧ
ಸಮಾಜದ ಎಲ್ಲರೂ ಶಿಕ್ಷಣ ಪಡೆದರೆ ಪೊಲೀಸ್, ನ್ಯಾಯಾಲಯ ಬೇಡ ಎನ್ನುವ ಅಭಿಪ್ರಾಯವಿತ್ತು. ಆದರೆ ಅದು ಬದಲಾಗಿ ಹೆಚ್ಚು ಶಿಕ್ಷಣ ಪಡೆದ ಕೆಲವರು ಅಪರಾಧ ಕೃತ್ಯಗಳಲ್ಲಿ ತೊಡಗಿರುವುದರಿಂದ ಅಪರಾಧ ಹೆಚ್ಚಾಗುತ್ತಿದ್ದು ಅದನ್ನು ಮಟ್ಟ ಹಾಕುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
-ಆರಗ ಜ್ಞಾನೇಂದ್ರ, ಗೃಹ ಸಚಿವ