ರಾಜ್ಯದಲ್ಲಿ ಸೆ.2ರವರೆಗೆ ಭಾರೀ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.30: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆ.31ರಿಂದ ಸೆ.2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆ ನಿರೀಕ್ಷೆ ಇದೆ. ಆ.31ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆ.31ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಆ.31ರಂದು ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story