ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
► ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು, ನ.15: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ನ.19ರವರೆಗೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಾವಣಗೆರೆ, ಚಿತ್ರದುರ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ನ.16, 17ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಿಲಿಕಾನ್ಸಿಟಿಯಲ್ಲಿ ಮತ್ತೆ ಸುರಿದ ಮಳೆ: ಕಳೆದ ನಾಲ್ಕೈದು ದಿನಗಳಿಂದ ಜಿಟಿಜಿಟಿ ಮಳೆ, ಶೀತಗಾಳಿ, ಚಳಿ ಮತ್ತು ಮೋಡ ಕವಿದ ವಾತಾವರಣವನ್ನೇ ಹೆಚ್ಚು ಕಂಡಿದ್ದ ನಗರದಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಗುಡುಗು ಮತ್ತು ಮಿಂಚು ಸಹಿತ ಮಳೆ ಜೋರಾಗಿ ಸುರಿದು, ತಡರಾತ್ರಿಯವರೆಗೂ ಸಣ್ಣಗೆ ಹನಿಯಿತು.
ಇನ್ನೂ 3 ದಿನ ಬೆಂಗಳೂರಿನಲ್ಲಿ ಮಳೆ: ಬೆಂಗಳೂರಿನಲ್ಲಿ ಇನ್ನು 3 ದಿನ ಸಿಡಿಲು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜತೆಗೆ ಶೀತಗಾಳಿ, ತಂಪು ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 25 ರಿಂದ 20 ಡಿಗ್ರಿ ಸೆಲ್ಸಿಯಸ್ ಇತ್ತು ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರದಲ್ಲಿ ಮಂಗಳವಾರ ಭಾರೀ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.