ಪೊಲೀಸ್ ಇಲಾಖೆ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ನ.17: ಕಸ ಸಂಗ್ರಹಕ್ಕೆ ಹೋದಾಗ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರ ಕಾರ್ಮಿಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಈಶ್ವರಪ್ಪ ಅವರು ಪೌರ ಕಾರ್ಮಿಕ ದೇವರಾಜ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ಬಳಿಕ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೌರ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಗೂಂಡಾಗಳಿಗೆ ಪೊಲೀಸ್ ಇಲಾಖೆಯ ಮೇಲೆ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಘಟನೆ ಕುರಿತು ಹಾಗೂ ಶಿವಮೊಗ್ಗ ಪೊಲೀಸ್ ಇಲಾಖೆಯಲ್ಲಿ ಏನೆಲ್ಲಾ ಆಗುತ್ತಿದೆ ಎನ್ನುವ ಕುರಿತು ಚರ್ಚೆ ಮಾಡಲು ಇಂದು ಸಂಜೆ ಜಿಲ್ಲಾರಕ್ಷಣಾಧಿಕಾರಿಯನ್ನು ಭೇಟಿಯಾಗುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಇ ಕಾಂತೇಶ್, ಮಾಜಿ ಮೇಯರ್ ಸುವರ್ಣಾ ಶಂಕರ್ ಮತ್ತಿತರರು ಇದ್ದರು.