ರಾಜ್ಯ ಒಕ್ಕಲಿಗರ ಸಂಘ ಚುನಾವಣೆ: 232 ನಾಮಪತ್ರ ಸಲ್ಲಿಕೆ
ಬೆಂಗಳೂರು, ನ.23: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆಗೆ ಇದುವರೆಗೆ 232ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿವೆ.
ಸಂಘದ 35 ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಮಂಗಳವಾರ ಹಲವು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಕ್ಷೇತ್ರಕ್ಕೆ 126 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರಿನಿಂದ 8, ಮಂಡ್ಯದಿಂದ 15, ಹಾಸನ 14, ತುಮಕೂರು 11, ಚಿತ್ರದುರ್ಗ 16, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ 21 ನಾಮಪತ್ರ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ 5, ಕೊಡಗಿನಿಂದ 3, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ 6, ಚಿಕ್ಕಮಗಳೂರಿನಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ನಾಮಪತ್ರಗಳ ಪಟ್ಟಿ ಪ್ರಕಟಿಸಲಾಗುತ್ತದೆ. ನ.25ರ ಮಧ್ಯಾಹ್ನ 3 ಗಂಟೆವರೆಗೂ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳು ಪ್ರಕಟಿಸಲಿದ್ದಾರೆ.
ನ.26ರಂದು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ಹಂಚಿಕೆ ಮಾಡಲಾಗುತ್ತದೆ. ಡಿ.12ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಡಿ.15ರ ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಫಲಿತಾಂಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.