ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ತನಿಖಾ ವರದಿ ಸಲ್ಲಿಕೆಗೆ ಅನುಮತಿ ಕೋರಿದ ಎಸ್ಐಟಿ
ಬೆಂಗಳೂರು, ಜ.7: ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಹೈಕೋರ್ಟ್ಗೆ ಮನವಿ ಮಾಡಿದೆ.
ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಹಾಗೂ ಯುವತಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು.
ಎಸ್ಐಟಿ ಪರ ವಾದಿಸಿದ ವಕೀಲರು, ಸೀಡಿ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ನಿರ್ಬಂಧವಿರುವ ಕಾರಣ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ. ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿದರು.
ಸಂತ್ರಸ್ತ ಯುವತಿ ಪರ ವಾದ ಮಂಡಿಸುತ್ತಿರುವ ಸುಪ್ರೀಂಕೋರ್ಟ್ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಕಿರಿಯ ವಕೀಲರು ಹಾಜರಾಗಿ, ಇಂದಿರಾ ಜೈಸಿಂಗ್ ಕೊರೋನ ಸೋಂಕಿಗೆ ತುತ್ತಾಗಿದ್ದು, ವಿಚಾರಣೆ ಮುಂದೂಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಮೇಶ್ ಜಾರಕಿಹೊಳಿ ಪರ ವಕೀಲರು, ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ಕಾಲಾವಕಾಶ ನೀಡಬಾರದು ಎಂದು ಕೋರಿದರು. ನ್ಯಾಯಪೀಠ, ವಿಚಾರಣೆಯನ್ನು ಜ.13ಕ್ಕೆ ಮುಂದೂಡಿತು.