ಬೀದಿ ಪ್ರಾಣಿಗಳ ಕಲ್ಯಾಣಕ್ಕೆ ಯೋಜನೆ: ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜ.15: ಗೋವು ಸೇರಿದಂತೆ ಬೀದಿಗಳಲ್ಲಿ ಇರುವ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ಜಾರಿಗೊಳಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು. ಅವುಗಳಿಗೆ ಮೇವು, ನೀರು, ಸೂಕ್ತ ಜಾಗ ಸೇರಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ನಿರ್ದೇಶನ ನೀಡುವಂತೆ ಕೋರಿ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ವಿಚಾರಣೆ ನಂತರ, ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿ ಗೋಶಾಲೆಗಳನ್ನು ಆರಂಭಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಜ.22ಕ್ಕೆ ಮುಂದೂಡಿತು.
Next Story