ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿ: ಸಿದ್ದರಾಮಯ್ಯಗೆ ಆರ್.ಧ್ರುವನಾರಾಯಣ ಮನವಿ
ಮೈಸೂರು,ಆ.8: ಈ ಬಾರಿ ನೀವು ವರುಣಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮನವಿ ಮಾಡಿದರು.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ವರುಣಾ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ಧ ಸಿದ್ದರಾಮಯ್ಯ ಅವರಲ್ಲಿ ಈ ಮನವಿ ಮಾಡಿ ಒತ್ತಾಯಿಸಿದರು.
''ಕ್ಷೇತ್ರದ ಜನತೆ ನೀವು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಬಯಸುತ್ತಿದ್ದಾರೆ. ನಾನು ಸಹ ನೀವು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆಮಾಡಬೇಕು ಎಂದು ಮನವಿ ಮಾಡುತ್ತೇನೆ. ದಯಮಾಡಿ ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿ'' ಎಂದು ಕೇಳಿಕೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಈ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು. ಈ ವೇಳೆ ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ನಗುತ್ತಲೇ ಧ್ರುವನಾರಾಯಣ ರತ್ತ ನೋಡುತ್ತಿದ್ದರು.