ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು, ಆ.9: ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ.10ರಂದು ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ ಮತ್ತು ದಕ್ಷಿಣ ಒಳನಾಡಿನ ಹಾಸನ ನಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತಿ ಮಳೆಯಾಗುವ ಸಾಧ್ಯತೆ ಇದೆ.
ಆ.10-11ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ತೀರದಲ್ಲಿ ಮುಂದಿನ ಎರಡು ದಿನ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕೀ.ಮೀ.ನಿಂದ 50 ಕಿ.ಮೀ.ತಲುಪುವ ಸಾಧ್ಯತೆಯಿದ್ದು, 60 ಕಿ.ಮೀ.ವರೆಗೂ ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ. ಬುಧವಾರ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚುಸಹಿತ ಮಳೆ ಸಾಧ್ಯತೆ ಇದೆ.
ನಗರದಲ್ಲಿ ಹಗುರದಿಂದ ಸಾಧಾರಣ ಮಳೆ: ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ: ಮಂಗಳವಾರ ಉಡುಪಿ ಜಿಲ್ಲೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾದರೆ, ಬೆಳಗಾವಿ ಜಿಲ್ಲೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ. ಹಾವೇರಿ, ದಾವಣಗೆರೆ, ಧಾರವಾಡ. ಬಾಗಲಕೋಟೆ, ಬೀದರ್, ಗದಗ, ಚಿತ್ರದುರ್ಗ, ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.
ಕಳೆದೊಂದು ವಾರದಲ್ಲಿ 34 ಸಾವು: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ, ಭೂಕುಸಿತ, ರಸ್ತೆ ಕುಸಿತ, ಸೇತುವೆ ಕುಸಿತಗಳಾಗಿವೆ. ಮಳೆ ಸಂಬಂಧಿ ಪ್ರತ್ಯೇಕ ಅನಾಹುತಗಳಲ್ಲಿ ಕಳೆದೊಂದು ವಾರದಲ್ಲಿ ಮೃತಪಟ್ಟಿರುವವರ ಒಟ್ಟು ಸಂಖ್ಯೆ 34ಕ್ಕೇರಿದೆ. ಇದೇ ವೇಳೆ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಮತ್ತು ತುಂಗಭದ್ರಾ ಜಲಾಶಯಗಳಿಗೆ ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು ನದಿ ತೀರದ ಪ್ರದೇಶಗಳು ಮುಳುಗಡೆಯಾಗಿವೆ.