ಅನಧಿಕೃತ ಕಟ್ಟಡಗಳ ತಡೆಗೆ ವಿಫಲ; ಅಧಿಕಾರಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಗೆ ಕೋರಿ ಅರ್ಜಿ: ಹೈಕೋರ್ಟ್ನಿಂದ ನೋಟಿಸ್ ಜಾರಿ
ಬೆಂಗಳೂರು, ಆ.11: ನಗರದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗಟ್ಟಲು ವಿಫಲರಾಗುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಲು ಬಿಬಿಎಂಪಿ ಕಾಯ್ದೆ-2020ರ ಸೆಕ್ಷನ್ 252ರ ಅಡಿಯಲ್ಲಿ ಶಿಕ್ಷೆ ಪ್ರಮಾಣ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನಗರದ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ಹೆಚ್ಚಾಗಿದೆ. ಒತ್ತುವರಿಗೊಳಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗುತ್ತಿದೆ. ಬಿಬಿಎಂಪಿ ಕಾಯ್ದೆಯ ಸೆಕ್ಷನ್ 252 ಪ್ರಕಾರ ನಗರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತಡೆಯಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಸರಕಾರ ಕ್ರಮ ಜರುಗಿಸಬಹುದಾಗಿದೆ. ಆದರೆ, ಸರಕಾರ ಮಾತ್ರ ಸೆಕ್ಷನ್ 252ರ ಅಡಿ ಶಿಕ್ಷೆ ಪ್ರಮಾಣ ನಿಗದಿಪಡಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.