ಜನನ ಮರಣ ನೋಂದಣಿ ಕಾಯ್ದೆ ತಿದ್ದುಪಡಿ: ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಆ.25: ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರ ಮಾಡಿದ್ದ ತಿದ್ದುಪಡಿಗೆ ಹೈಕೋರ್ಟ್ (High Court of Karnataka) ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ.ಬಿರಾದರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಪ್ರತಿವಾದಿಗಳಾದ ಸರಕಾರದ ಮುಖ್ಯ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆಗೆ ಹಾಗೂ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿತು.
ರಾಜ್ಯ ಸರಕಾರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು ವಿಳಂಬ ನೋಂದಣಿ ಅಧಿಕಾರ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿರುವುದು ಸಾರ್ವಜನಿಕರಿಗೆ ಹಾಗೂ ಗ್ರಾಮಾಂತರ ನ್ಯಾಯಾಲಯದ ವಕೀಲರಿಗೆ ತುಂಬಾ ಅನ್ಯಾಯ. ಇದು ಕಾನೂನು ಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.