ಪರೇಶ್ ಮೇಸ್ತಾ ಸಾವು ಪ್ರಕರಣ: 122 ಜನರ ವಿರುದ್ಧ ದಾಖಲಾಗಿದ್ದ ಕೇಸ್ ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು, ಫೆ.21: ರಾಜ್ಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳು ಹಾಗೂ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ 20ಕ್ಕೂ ಹೆಚ್ಚು ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಕೂಡ ಹಿಂಪಡೆಯಲಾಗುತ್ತಿದೆ ಎಂದು ವರದಿಯಾಗಿದೆ.
2017 ರಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಹತ್ಯೆ ನಡೆಸಲಾಗಿದೆ ಎಂದು ಆರೋಪಿಸಿ ಜಿಲ್ಲೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆ ಶಿರಸಿಯಲ್ಲಿ ಗಲಭೆಗೆ ಕಾರಣವಾಗಿತ್ತು.
'ಬಿ' ರಿಪೋರ್ಟ್ ಸಲ್ಲಿಸಿದ್ದ ಸಿಬಿಐ: ''ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ, ಅದೊಂದು ಆಕಸ್ಮಿಕ ಸಾವು'' ಎಂದು ಈಗಾಲೇ ಸಿಬಿಐ ಅಧಿಕಾರಿಗಳಿಂದ ತನಿಖಾ ವರದಿ ನ್ಯಾಯಾಲಯಕ್ಕೆ ಇ್ತತೀಚೆಗೆ ಸಲ್ಲಿಕೆಯಾಗಿದೆ.
ಪ್ರತಿಭಟನೆ ವೇಳೆ ಐಜಿಪಿ ಅವರ ಕಾರಿಗೆ ಬೆಂಕಿ:
ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್ ಹೆಗ್ಡೆ ಸೇರಿದಂತೆ ಹಲವರು ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ಅವರ ನೇತೃತ್ವದ ಅಂದಿನ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ನಡೆದ ಗಲಭೆ ವೇಳೆ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು ತೂರಲಾಯಿತು. ಪೊಲೀಸರು ಗಾಯಗೊಂಡಿದ್ದರು ಹಾಗೂ ಪೊಲೀಸರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿದ್ದವು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಸಂಘಪರಿವಾರದ ಕಾರ್ಯರ್ತರ ಹತ್ಯೆಯಾಗಿದೆ ಎಂದು ಆರೋಪಿಸುತ್ತಿದ್ದ ಬಿಜೆಪಿ, ಪರೇಶ್ ಮೇಸ್ತಾ ಹೆಸರನ್ನು ಕೂಡ ಪಟ್ಟಿಯಲ್ಲಿ ಸೇರಿಸಿತ್ತು.
ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಂಪುಟ ಸಭೆಯಲ್ಲಿ 2023ರ ಜನವರಿ10 ಮತ್ತು ಜನವರಿ 20 ರಂದು ಸಂಪುಟದ ಉಪಸಮಿತಿ ಸಭೆಯ ಶಿಫಾರಸಿನಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 21 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
ಇದನ್ನೂ ಓದಿ: ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ, ಅದೊಂದು ಆಕಸ್ಮಿಕ ಸಾವು : ಬಿ ರಿಪೋರ್ಟ್ ಸಲ್ಲಿಸಿದ ಸಿಬಿಐ







