ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರು ಹತ
ಶ್ರೀನಗರ, ಜ. 21: ಜಮ್ಮು ಹಾಗೂ ಕಾಶ್ಮೀರದಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಮೂರನೇ ಉಗ್ರ ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಹಾಗೂ ಕಾಶ್ಮೀರದ ಬುಡ್ಗಾಂವ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು.
ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೈಫಲ್ಸ್, ಬುಡ್ಗಾಂವ್ ಪೊಲೀಸ್ ಹಾಗೂ ಸಿಆರ್ಪಿಎಫ್ ಅಧಿಕಾರಿಗಳನ್ನು ಒಳಗೊಂಡ ತಂಡ ಶೋಧ ಕಾರ್ಯಾಚರಣೆ ಆರಂಭಿಸಿತು. ಈ ಸಂದರ್ಭ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ಪರಿಣಾಮ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇನ್ನೋರ್ವ ಉಗ್ರನೊಂದಿಗೆ ಗುಂಡಿನ ಚಕಮಕಿ ಮುಂದುವರಿದಿದೆ. ಮೃತಪಟ್ಟ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story