ಕೋವಿಡ್ ಹಿನ್ನೆಲೆ: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
ಹೊಸದಿಲ್ಲಿ: ಕೊರೋನ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೇ-ಜೂನ್ನಲ್ಲಿ ನಿಗದಿಯಾಗಿದ್ದ 10 ನೇ ತರಗತಿ ಸಿಬಿಎಸ್ಇ ಮಂಡಳಿ ಪರೀಕ್ಷೆಗಳನ್ನು ರದ್ದುಪಡಿಸುವುದಾಗಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಷ್ಕೃತ ದಿನಾಂಕಗಳನ್ನು ಜೂನ್ 1ರ ನಂತರ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನ ವೈರಸ್ ಕಾಯಿಲೆ (ಕೋವಿಡ್ -19) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್, ಶಿಕ್ಷಣ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಪರೀಕ್ಷೆಗಳನ್ನು ಮೇ ಮತ್ತು ಜೂನ್ನಲ್ಲಿ ನಿಗದಿಪಡಿಸಲಾಗಿತ್ತು.
ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು.