ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹಿಸಿ ಅ. 26ರಂದು ರೈತರಿಂದ ಧರಣಿ
ನೋಯ್ಡ, ಅ. 25: ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ ಲಖಿಂಪುರ ಖೇರಿ ಹಿಂಸಾಚಾರದ ಆರೋಪಿಯಾಗಿರುವ ಆಶೀಷ್ ಮಿಶ್ರಾ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಈ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.
‘‘ದೇಶದ ಪ್ರತಿ ಜಿಲ್ಲೆಯ ಆಡಳಿತದ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು’’ ಎಂದು ಪ್ರತಿಭಟನೆಯ ಭಾಗವಾಗಿರುವ ಭಾರತೀಯ ಕಿಸಾನ್ ಮೋರ್ಚಾದ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲ್ಲಿಕ್ ಅವರು ಹೇಳಿದ್ದಾರೆ.
‘‘ರಾಷ್ಟ್ರ ವ್ಯಾಪಿ ಈ ಪ್ರತಿಭಟನೆಗೆ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಎಲ್ಲ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿವೆ. ಮನವಿ ಮೂಲಕ ನಾವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತೊಮ್ಮೆ ಆಗ್ರಹಿಸಲಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ.