''3 ದಿನಗಳಲ್ಲಿ ಪ್ರತಿಕ್ರಿಯಿಸಿ": ಲೈಂಗಿಕ ಕಿರುಕುಳ ಆರೋಪದ ಕುರಿತು ಕುಸ್ತಿ ಫೆಡರೇಶನ್ ಗೆ ಕೇಂದ್ರ ಸೂಚನೆ

ಹೊಸದಿಲ್ಲಿ: ಒಲಿಂಪಿಯನ್ ವಿನೇಶ್ ಫೋಗಟ್, ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಕ್ರೀಡಾ ಸಂಸ್ಥೆಯ ತರಬೇತುದಾರರು ಹಾಗೂ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ ನಂತರ ಕ್ರೀಡಾ ಸಚಿವಾಲಯವು "ಮುಂದಿನ 72 ಗಂಟೆಗಳ ಒಳಗೆ" ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ನಿಂದ ಪ್ರತಿಕ್ರಿಯೆಯನ್ನು ಕೋರಿದೆ.
ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, "ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ನನಗೆ ಜೀವ ಬೆದರಿಕೆ ಹಾಕಿದ್ದಾರೆ" ಎಂದು ಹೇಳಿದರು.
ಫೋಗಟ್ ಅವರು ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ಬುಧವಾರ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ರನ್ನು ವಜಾಗೊಳಿಸುವಂತೆ ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.





