ಜ. 31ಕ್ಕೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಸಂಸ್ಕೃತಿ ಉತ್ಸವ
ಉಡುಪಿ, ಜ.27: ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಎಂಜಿಎಂ ಕಾಲೇಜು ಉಡುಪಿ ಇವರ ಸಹಕಾರದೊಂದಿಗೆ ಜ.31ರಂದು ಸಂಸ್ಕೃತಿ ಉತ್ಸವವು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪ್ರಸಿದ್ಧ ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಶ್ರೀಮತಿ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ’ವಿಶ್ವಪ್ರಭಾ’ ಪುರಸ್ಕಾರವನ್ನು ಒಂದು ಲಕ್ಷ ರೂ. ಗೌರವಧನದೊಂದಿಗೆ ಪ್ರದಾನ ಮಾಡಿ ಗೌರವಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಮೋಹನ್ ಆಳ್ವ ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣಿೈ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಗೊಳ್ಳಲಿದೆ.
ನಂತರ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಕಲಾವಿದರಿಂದ ರಂಗ ಮಾಂತ್ರಿಕ ಜೀವನ್ ರಾಂ ಸುಳ್ಯ ನಿರ್ದೇಶನದ ಮಕ್ಕಳ ಮಾಯಾಲೋಕ ನಾಟಕ ಪ್ರದರ್ಶನಗೊಳ್ಳಲಿದೆ. ಇದಕ್ಕೆ ಕಲಾಭಿಮಾನಿಗಳಿಗೆ ಮುಕ್ತ ಪ್ರವೇಶವಿದೆ ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.