ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ
ಉಡುಪಿ, ಮಾ.31: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022ರ ಮಾರ್ಚ್ 26ರಂದು ರಾತ್ರಿ ಗುರುರಾಜ್ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಸುನೀತಾ ರಾಮಚಂದ್ರರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿಜೆ ಮತ್ತು ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಗುರುರಾಜ್ಗೆ ಭಾ.ದಂ.ಸಂ.ಕಲಂ:380ರಡಿ 5 ವರ್ಷ ಮತ್ತು ಕಲಂ 457ರಡಿ 5 ವರ್ಷಗಳ ಕಠಿಣ ಸಜೆ ಮತ್ತು ರೂ. 5000 ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸಾಧಾರಣಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.