ಬಾಗಲಕೋಟೆ | 8 ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬಾಗಲಕೋಟೆ: ಭ್ರಷ್ಟಾಚಾರ, ದುರಾಡಳಿತ, ಮಧ್ಯವರ್ತಿಗಳ ಹಾವಳಿ ಹಾಗೂ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಕುರಿತು ಸಾರ್ವಜನಿಕರಿಂದ ಬಂದ ದೂರುಗಳು ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬಾಗಲಕೋಟೆ ಜಿಲ್ಲೆಯ ವಿವಿಧ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಶೋಧನೆ ಹಾಗೂ ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ.
ಕರ್ನಾಟಕ ಲೋಕಾಯುಕ್ತರ ನಿರ್ದೇಶನದಂತೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಜಿಲ್ಲೆಯ ಎಂಟು ಉಪನೋಂದಣಾಧಿಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸುತ್ತಿದ್ದಾರೆ.
ಬದಾಮಿ, ಹುನಗುಂದ, ಮುಧೋಳ, ಬೀಳಗಿ, ತೇರದಾಳ, ಇಳಕಲ್, ಗುಳೇದಗುಡ್ಡ ಹಾಗೂ ಕೆರೂರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ಶೋಧನೆ ಮತ್ತು ಪರಿಶೀಲನಾ ಕಾರ್ಯ ನಡೆಯುತ್ತಿದೆ.
ಬಾಗಲಕೋಟೆ, ಧಾರವಾಡ, ಗದಗ ಹಾಗೂ ವಿಜಯನಗರ ಜಿಲ್ಲೆಗಳ ಲೋಕಾಯುಕ್ತ ಘಟಕಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟು ಡಿಎಸ್ಪಿ-01, ಪೊಲೀಸ್ ನಿರೀಕ್ಷಕರು-07 ಹಾಗೂ ಸಿಬ್ಬಂದಿ ವರ್ಗದ 24 ಮಂದಿ ಸೇರಿದಂತೆ 32 ಅಧಿಕಾರಿ–ಸಿಬ್ಬಂದಿ ಶೋಧನಾ ಕಾರ್ಯದಲ್ಲಿ ತೊಡಗಿದ್ದಾರೆ.
ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ದಾಖಲೆಗಳು, ಶುಲ್ಕ ವಸೂಲಿ ಹಾಗೂ ಕಚೇರಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸಲಾಗುತ್ತಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ.ನಂದಗಾಂವಿ ತಿಳಿಸಿದ್ದಾರೆ.






