ಬಾಗಲಕೋಟೆ | ರಾಜ್ಯಮಟ್ಟದ ಜೂಡೋ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 2026-27 ನೇ ಸಾಲಿನ 14 ಮತ್ತು 17 ವರ್ಷದೊಳಗಿನ ವಯೋಮಿತಿಯ ರಾಜ್ಯಮಟ್ಟದ ಜೂಡೋ ಪಂದ್ಯಾವಳಿ ಬಾಗಲಕೋಟೆಯಲ್ಲಿ ಆರಂಭಗೊಂಡಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಬಾಗಲಕೋಟೆ ನಗರದಲ್ಲಿ ರಾಜ್ಯ ಮಟ್ಟದಲ್ಲಿ ನಡೆಯಲಿರುವ ಜೋಡೋ ಪಂದ್ಯಾವಳಿಗೆ ರಾಜ್ಯದ 23 ಜಿಲ್ಲೆಗಳಿಂದ ಕ್ರೀಡಾಪಟುಗಳು ಬಂದಿದ್ದಾರೆ.ಅವರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ರೀಡಾಪಟು ಹಂಸಿ ಮಾತನಾಡಿ,ಇಲ್ಲಿನ ವ್ಯವಸ್ಥೆ ಚನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ವಿಠ್ಠಲ ವಾಲೀಕಾರ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದು,ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು.
ಪಂದ್ಯಾವಳಿಯಲ್ಲಿ ವಿವಿಧ ವಯೋಮಿತಿಯ ವಿದ್ಯಾರ್ಥಿಗಳು ಜೂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಬಹುಮಾನ ಪಡೆದಕೊಂಡು ಕ್ರೀಡಾಪಟುಗಳು ಅಕ್ಟೋಬರ್ 20 ರಂದು ದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಜೋಡೋ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡಾಪಟುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.






