ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ | ಅಧಿಕಾರಿಗಳೊಂದಿಗೆ ಸಚಿವ ಝಮೀರ್ ಅಹ್ಮದ್ ಖಾನ್ ಸಭೆ

ಬೆಂಗಳೂರು, ಸೆ.20 : ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳ ಕೆಎಂಡಿಸಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಿಲ್ಲಾ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಶನಿವಾರ ನಗರದಲ್ಲಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಝೂಮ್ ಸಭೆ ನಡೆಸಿದ ಅವರು, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ, ಯಾರೂ ಈ ಸಮೀಕ್ಷೆಯಿಂದ ದೂರ ಉಳಿಯದಂತೆ ನೋಡುಕೊಳ್ಳಬೇಕು ಎಂದು ಸೂಚಿಸಿದರು.
ಸೆ.22 ರಿಂದ ಅ.7 ರವರೆಗೆ ದೈನಂದಿನ ಪ್ರಗತಿಯ ಮಾಹಿತಿ ನೀಡಬೇಕು. ಲೋಪ ಕಂಡು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಕೆಎಂಡಿಸಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಿಲ್ಲಾ ಅಧಿಕಾರಿಗಳು ತಂಡ ರಚಿಸಿಕೊಂಡು ಪ್ರತಿನಿತ್ಯ ಸಮೀಕ್ಷೆಯ ಮೇಲುಸ್ತುವಾರಿ ವಹಿಸಬೇಕು. ನಾನು ಸಹ ಪ್ರತಿದಿನ ಸಂಜೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತೇನೆ ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಜಿಲಾನಿ ಮೊಕಾಶಿ, ಹಿರಿಯ ಮುಖಂಡ ಶಕೀಲ್ ನವಾಝ್ ಉಪಸ್ಥಿತರಿದ್ದರು.







