ಬೆಂಗಳೂರು | ಭೂಸ್ವಾಧೀನ ವಿರೋಧಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಂಗಳೂರು : ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಸರಕಾರದ ಭೂಸ್ವಾಧೀನ ವಿರೋಧಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಶನಿವಾರ ಈ ರೈತರ ಹೋರಾಟಕ್ಕೆ ಅಹಿಂದ ಒಕ್ಕೂಟ ಸಮಿತಿಯ ರಾಜ್ಯಾಧ್ಯಕ್ಷ ಡಾ.ಮುತ್ತುರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಅವರು, ಈ ವ್ಯಾಪ್ತಿಯಲ್ಲಿ ಸುಮಾರು 9,600 ಎಕರೆ ಕೃಷಿ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳಲು ಸರಕಾರ ಮುಂದಾಗಿದೆ.
ಆದರೆ, ಇಲ್ಲಿನ ಫಲವತ್ತಾದ ಭೂಮಿಯಲ್ಲಿ ರೈತರು ಹಣ್ಣು-ತರಕಾರಿ ಬೆಳೆಗಳನ್ನು ಬೆಳೆಯುತ್ತಿದ್ದು, ಹೈನುಗಾರಿಕೆಯಲ್ಲಿ ತೊಡಗಿದ್ದು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸರಕಾರ ಕೈಗಾರಿಕೆ ಸ್ಥಾಪನೆ ನೆಪದಲ್ಲಿ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಕ್ಕೆ ರೈತರ ವಿರೋಧವಿದೆ. ಹೀಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಮುಖಂಡರಾದ ನರಸಿಂಹಯ್ಯ, ಪುಟ್ಟರಾಜು ಮತ್ತಿತರರು ಹಾಜರಿದ್ದರು.





