ಡಿ.ಕೆ.ಸುರೇಶ್ ಜೊತೆ ಝಮೀರ್ ಅಹ್ಮದ್ ಚರ್ಚೆ

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ಗಣ್ಯರನ್ನು ಡಿ.ಕೆ.ಸುರೇಶ್ ಆಹ್ವಾನಿಸುತ್ತಿದ್ದಾರೆ. ಇದರ ಭಾಗವಾಗಿ ಝಮೀರ್ ಅಹ್ಮದ್ ಅವರ ನಿವಾಸಕ್ಕೂ ಭೇಟಿ ನೀಡಿ ಆಹ್ವಾನಿಸಿದ್ದಾರೆ ಎಂದು ಗೊತ್ತಾಗಿದೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಮತ ಹಾಕಿಸುವಂತೆ ಝಮೀರ್ ಅಹ್ಮದ್ ಅವರು, ಕಾಂಗ್ರೆಸ್‍ನ ಉಚ್ಛಾಟಿತ ನಾಯಕನ ಜೊತೆ ಸಂಭಾಷಣೆ ನಡೆಸಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು.
ಮಾಜಿ ಸಿಎಂ ಸಿದ್ದರಾಮಯ್ಯರ ಜೊತೆ ದಿಲ್ಲಿಗೆ ತೆರಳುತ್ತಿದ್ದ ಝಮೀರ್ ಅಹ್ಮದ್ ಅವರು ಆಡಿಯೋ ವೈರಲ್ ಹಿನ್ನೆಲೆಯಲ್ಲಿ ದಿಲ್ಲಿ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಹಿಂದಿರುಗಿದ್ದರು. ಆ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರು, ಝಮೀರ್ ಅಹ್ಮದ್ ಅವರ ನಿವಾಸಕ್ಕೆ ತೆರಳಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆಂದು ಗೊತ್ತಾಗಿದೆ.
ಉಚ್ಛಾಟನೆಗೆ ಒತ್ತಾಯ: ಈ ಮಧ್ಯೆ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾಜಿ ಸಚಿವ ಝಮೀರ್ ಅಹ್ಮದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂಬ ಒತ್ತಾಯವೂ ಕೇಳಿ ಬಂದಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷ ಕುಶಾಲ್ ಹರುವೆಗೌಡ ಎಂಬವರು ಈ ಕುರಿತು ಹೈಕಮಾಂಡ್‍ಗೆ ದೂರು ನೀಡಿದ್ದಾರೆ.






