ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು : ಅಬಕಾರಿ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಸರಕಾರದ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ವರ್ಗಾವಣೆ ಮಾಡುವ ಕಾನೂನಿಗೆ ತಿದ್ದುಪಡಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಬಕಾರಿ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಘನತೆ ಉಳಿಸಿಕೊಂಡರೆ ಸರಕಾರದ ಘನತೆ ಹೆಚ್ಚುತ್ತದೆ. ನೀವು ಸರಕಾರದ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ನಾವು ನೋಡುತ್ತಾ ಕೂರುವುದಿಲ್ಲ. ಅಬಕಾರಿ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲು ಆಗುವುದಿಲ್ಲ ಎಂದುಕೊಳ್ಳಬೇಡಿ. ಅಗತ್ಯಬಿದ್ದರೆ ವರ್ಗಾವಣೆ ಮಾಡಲು ಅಗತ್ಯವಾದ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದರು.
ರಾಜ್ಯ ಸರಕಾರ ಕೆಟ್ಟ ಹೆಸರು ಬರುವಂತೆ ನಡೆದುಕೊಂಡರೆ ಯಾರನ್ನೂ, ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ. ಇಲಾಖೆಯಲ್ಲಿ ಹೊಸದಾಗಿ ಎಐಬಿ ಪದ್ಧತಿ ಜಾರಿಯಾದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗಿದೆ. ಹೊಸದಾಗಿ 574 ಸನ್ನದುಗಳನ್ನು ಇ-ಹರಾಜು ಹಾಕಲು ನಿರ್ಧರಿಸಲಾಗಿದೆ. ಪರವಾನಗಿ ನವೀಕರಣ ಮೊತ್ತವನ್ನು ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಿ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಇಲಾಖೆ ಹೇಗೆ ನಡೆಯುತ್ತಿದೆ ಎನ್ನುವ ವರದಿ ನೋಡಿದ್ದೇನೆ. ಇಲಾಖೆಗೆ ಕೊಟ್ಟಿರುವ ಗುರಿ ತಲುಪಲು ಶ್ರಮಿಸಬೇಕು ಎಂದು ಅವರು ಸೂಚಿಸಿದರು.






