ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಏರಿಕೆ

ಕೆ.ಜೆ.ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 84.34ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ರಾಜ್ಯದಲ್ಲಿ ಜಲ ವಿದ್ಯುತ್ ಮತ್ತು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ವಹಿಸುತ್ತಿದ್ದು, ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸುಸ್ಥಿತಿಯಲ್ಲಿಟ್ಟು ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆಯನ್ನು ಪ್ರತಿನಿತ್ಯ 100 ದಶಲಕ್ಷ ಯೂನಿಟ್ಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ.
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿದ್ಯುತ್ ಉತ್ಪಾದನೆ ಕುರಿತಂತೆ ಈಗಾಗಲೇ ಕೆಪಿಸಿಎಲ್ನ ಪ್ರಗತಿ ಪರಿಶೀಲನೆ ನಡೆಸಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದಿಸಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ. ಈ ಬಾರಿ ಮಳೆಗಾಲದಲ್ಲಿ, ಅದರಲ್ಲೂ ಮುಖ್ಯವಾಗಿ ಜುಲೈ ತಿಂಗಳಲ್ಲಿ ರಾಜ್ಯದ 3ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಅಗತ್ಯ ಕಲ್ಲಿದ್ದಲು ಪೂರೈಕೆ ಜತೆಗೆ ವಿದ್ಯುತ್ ಉತ್ಪಾದನೆಯಲ್ಲೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಹಿಂದಿನ ವರ್ಷ ಜುಲೈ ತಿಂಗಳಲ್ಲಿ ನಿತ್ಯ ಸರಾಸರಿ 54.47ದಶಲಕ್ಷ ಯೂನಿಟ್ ಉತ್ಪಾದನೆ ಮಾಡಲಾಗಿತ್ತು.
ವಿದ್ಯುತ್ ಉತ್ಪಾದನೆ ಪ್ರಮಾಣ: ಈ ವರ್ಷದ ಜುಲೈ ತಿಂಗಳಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಜುಲೈ ತಿಂಗಳಲ್ಲಿ ಸರಾಸರಿ 24.45ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ 33.64ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಯರಮರಸ್ ಶಾಖೋತ್ಪನ್ನ ಸ್ಥಾವರದಲ್ಲಿ ಸರಾಸರಿ26.25 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.
ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಹೆಚ್ಚಿಸಲಾಗಿದೆ. ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವುದರ ಜತೆಗೆ ಹೆಚ್ಚುವರಿ ಕಲ್ಲಿದ್ದಲು ಸಂಗ್ರಹಿಸಲಾಗುತ್ತಿದೆ. ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಮೂಲಕ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ.
-ಕೆ.ಜೆ.ಜಾರ್ಜ್, ಇಂಧನ ಸಚಿವ
ಮುಖ್ಯಮಂತ್ರಿ ಹಾಗೂ ಇಂಧನ ಸಚಿವರ ಸೂಚನೆಯಂತೆ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ ಜಲ ವಿದ್ಯುತ್ ಕೊರತೆಯನ್ನು ನೀಗಿಸಲು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗೆ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಪ್ರತಿನಿತ್ಯ 100ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲು ಸ್ಥಾವರಗಳನ್ನು ಶೇ.100ರಷ್ಟು ಸನ್ನದ್ಧಗೊಳಿಸಲಾಗುತ್ತಿದೆ.
-ರಾಜೇಂದ್ರ ಚೋಳನ್ ಪಿ., ವ್ಯವಸ್ಥಾಪಕ ನಿರ್ದೇಶಕ, ಕೆಪಿಸಿಎಲ್






