ಪಿಒಪಿ ಗಣೇಶ ಮೂರ್ತಿ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಿ; ಪೊಲೀಸ್ ಇಲಾಖೆಗೆ ಪತ್ರ ಬರೆದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಬೆಂಗಳೂರು : ಗಣೇಶ ಚತುರ್ಥಿಯ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರು ನೈಸರ್ಗಿಕ ಮಣ್ಣಿನಿಂದ ತಯಾರಿಸಿದ, ಬಣ್ಣರಹಿತ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ)ಗಣೇಶ ಮೂರ್ತಿಗಳನ್ನು ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯು, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.
ಪಿಒಪಿ ಗಣೇಶ ಮೂರ್ತಿಗಳ ಬಳಕೆಯಿಂದ ಜಲಮೂಲಗಳ ಮಾಲಿನ್ಯ, ಜಲಚರಗಳ ಮೇಲೆ ದುಷ್ಪರಿಣಾಮ ಹಾಗೂ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರು ಪೆಂಡಾಲ್‍ಗಳಲ್ಲಿ ಕೇವಲ ಪರಿಸರ ಪೂರಕವಾದ ಮತ್ತು ನೈಸರ್ಗಿಕ ಜೇಡಿಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಗಣೇಶ ಚತುರ್ಥಿಯ ಹಬ್ಬ-2026ರ ಆಚರಣೆಗಾಗಿ ಅನುಮತಿ ನೀಡುವ ಸಂದರ್ಭದಲ್ಲಿ ಪೆಂಡಾಲ್‍ಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು ಮತ್ತು ರಾಸಾಯನಿಕ, ಭಾರ ಲೋಹ ಆಧಾರಿತ ಬಣ್ಣಗಳಿಂದ ಅಲಂಕರಿಸಲ್ಪಟ್ಟ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಈ ಸಂಬಂಧ ಆಯೋಜಕರಿಗೆ ಸೂಕ್ತ ಸೂಚನೆ ನೀಡಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.




