ಸರಕಾರ ಆರೋಗ್ಯ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ : ಬೈರತಿ ಸುರೇಶ್

ಬೆಂಗಳೂರು : ರಾಜ್ಯದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಜನಸಾಮಾನ್ಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ 125 ಹಾಸಿಗೆ ಸಾಮಥ್ರ್ಯದ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ರವಿವಾರ ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವ ಕಡೆಯಲ್ಲೆಲ್ಲಾ ಸರಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಮಾಡಿದ್ದಾರೆ. ಈ ಮೂಲಕ ನಮ್ಮ ಕಾಂಗ್ರೆಸ್ ಸರಕಾರದ ಆರೋಗ್ಯದ ಕುರಿತ ಬದ್ಧತೆಯನ್ನು ತೋರಿಸುತ್ತಿದೆ ಎಂದರು.
ಸರಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಳೆದ ಮೂರು ವರ್ಷಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರಕಾರ ಬರೋಬ್ಬರಿ 1.56 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ. ಇದನ್ನು ನೋಡಿ ಹೊಟ್ಟೆ ಉರಿದುಕೊಳ್ಳುತ್ತಿರುವ ಬಿಜೆಪಿ ನಾಯಕರು ಬೊಗಳೆ ಬಿಡುತ್ತಿದ್ದಾರೆ ಎಂದು ಬೈರತಿ ಸುರೇಶ್ ಲೇವಡಿ ಮಾಡಿದರು.
ಹೆಬ್ಬಾಳ ಕ್ಷೇತ್ರಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಳೆದ ಮೂರು ವರ್ಷಗಳಲ್ಲಿ ಸುಮಾರು ಒಂದು ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಹಣವಿಲ್ಲದಿದ್ದರೆ ಕೇವಲ ಒಂದು ಕ್ಷೇತ್ರಕ್ಕೆ ಇಷ್ಟೊಂದು ಹಣ ಕೊಡಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದ ಶಿವಕುಮಾರ್ ಅವರು ವಿಶೇಷ ಆಸಕ್ತಿ ತೋರಿ ಆಸ್ಪತ್ರೆ ನಿರ್ಮಾಣಕ್ಕೆ ಸಮ್ಮತಿ ಸೂಚಿಸಿದ್ದರು. ಅವರ ಈ ಜನಪರ ನಿಲುವಿನಿಂದಾಗಿ ಇಂದು ಹೆಬ್ಬಾಳಕ್ಕೆ ಹೈಟೆಕ್ ಆಸ್ಪತ್ರೆ ಬರಲಿದೆ ಎಂದರು.
ಸುಮಾರು 3 ಎಕರೆ ಪ್ರದೇಶದಲ್ಲಿ ಆಸ್ಪತ್ರೆಯ ಕಾಮಗಾರಿಯನ್ನು ಮುಂದಿನ 13 ತಿಂಗಳಲ್ಲಿ ಪೂರ್ಣಗೊಳಿಸಿ ಮುಖ್ಯಮಂತ್ರಿ ಶಿವಕುಮಾರ್ ಅವರೇ ಉದ್ಘಾಟನೆ ಮಾಡಲಿದ್ದಾರೆ ಎಂದು ಸುರೇಶ್ ಘೋಷಿಸಿದರು.






