ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರಕ್ಕೆ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸಲು ಆಗ್ರಹ

ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ಸಮುದಾಯಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರವು ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ.
ಶುಕ್ರವಾರ ಈ ಕುರಿತು ಪ್ರಕಟಣೆ ನೀಡಿರುವ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಜನಸಂಖ್ಯೆ ಮತ್ತು ಸಾಮಾಜಿಕ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಬೇಕು. 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂ.ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಆದರೆ, ಅವುಗಳ ಪರಿಣಾಮಕಾರಿ ಅನುಷ್ಠಾ ನ ಮತ್ತು ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಜನಸಂಖ್ಯೆ ಹೆಚ್ಚಿದ್ದರೂ, ಶಿಕ್ಷಣ, ಉದ್ಯೋಗ, ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಕ್ಷೇತ್ರಗಳಲ್ಲಿ ಹಲವು ಸಮುದಾಯಗಳು ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಅಗತ್ಯವಾಗಿದೆ. ಹಿಂದುಳಿದ ಜಾತಿಗಳ ಅಭಿವೃದ್ಧಿಗಾಗಿ ಹಲವು ಆಯೋಗಗಳು ಮತ್ತು ಸಮಿತಿಗಳು ರಚನೆಯಾಗಿದ್ದರೂ, ಅವುಗಳ ಶಿಫಾರಸುಗಳ ಅನುಷ್ಠಾ ನ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಲ್ಲಿ ಸಮಸ್ಯೆಗಳಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಹೀಗಾಗಿ, ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಹಿಂದುಳಿದ ಜಾತಿಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಮರ್ಪಕ ಅನುದಾನ ಒದಗಿಸುವುದು, ಸಮುದಾಯಗಳ ಸಮಸ್ಯೆಗಳನ್ನು ನಿರಂತರವಾಗಿ ಪರಿಶೀಲಿಸುವುದು ಹಾಗೂ ಸರಕಾರದ ಯೋಜನೆಗಳ ಅನುಷ್ಠಾ ನಕ್ಕೆ ಹೊಣೆಗಾರಿಕೆ ನಿಗದಿಪಡಿಸುವುದು ಅಗತ್ಯ ಎಂದು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.






