ತಾಲೂಕು ಆಸ್ಪತ್ರೆಗಳ ಬಲವರ್ಧನೆಗೆ ಆದ್ಯತೆ : ದಿನೇಶ್ ಗುಂಡೂರಾವ್

ಬೆಂಗಳೂರು, ಆ.7: ಆರೋಗ್ಯ ಇಲಾಖೆಯಲ್ಲಿನ ಎಲ್ಲ ವೃಂದದ ಸಿಬ್ಬಂದಿ, ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದ್ದು, ತಾಲೂಕು ಆಸ್ಪತ್ರೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗುರುವಾರ ಇಲ್ಲಿನ ಆರೋಗ್ಯಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕೌನ್ಸಲಿಂಗ್‍ನಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ಒದಗಿಸಿಕೊಡಲಾಗಿದೆ ಎಂದರು.
ಆರೋಗ್ಯ ಇಲಾಖೆಯಲ್ಲಿ ಈ ಬಾರಿ ನಡೆದ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ, ತಾಲೂಕು ಆಸ್ಪತ್ರೆಗಳ ತಾಯಿ ಮತ್ತು ಮಕ್ಕಳ ಆರೈಕೆ ವಿಭಾಗದಲ್ಲಿ ದೀರ್ಘಕಾಲದಿಂದ ಖಾಲಿಯಿದ್ದ ಹುದ್ದೆಗಳ ಭರ್ತಿಗೆ ಆಧ್ಯತೆ ನೀಡಲಾಗಿದೆ. ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ತಲಾ ಒಬ್ಬರು ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು ಇರುವಂತೆ ವರ್ಗಾವಣೆ ಪ್ರಕ್ರಿಯೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೇ ವಿಶೇಷವಾಗಿ ಪ್ರತಿಯೊಂದು ತಾಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು ಹಾಗೂ ಅರವಳಿಕೆ ತಜ್ಞರು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನುಮೋದನೆ ಪಡೆಯಲಾಗುವುದು. ಇದರಿಂದಾಗಿ ತಾಲೂಕು ಆಸ್ಪತ್ರೆಗಳಲ್ಲಿ ದಿನದ 24 ಗಂಟೆ ವೈದ್ಯರು ಲಭ್ಯತೆಯಿರಲಿದೆ ಎಂದು ಅವರು ಹೇಳಿದರು.
ಇಲಾಖೆಯಲ್ಲಿ ವೈದ್ಯರ ಕೊರೆತ ಇರುವುದರಿಂದ ಕೆಲವು ಕಡೆ ಹುದ್ದೆ ಭರ್ತಿಯಾಗಿರಲಿಲ್ಲ. 2 ಸಾವಿರ ಎಂಬಿಬಿಎಸ್ ವೈದ್ಯರು, 185 ತಜ್ಞ ವೈದ್ಯರ ಕೊರತೆ ಇದೆ. ಇದನ್ನು ಸರಿದೂಗಿಸಲು ಸರಕಾರಿ ವೈದ್ಯಕೀಯ ಸೀಟು ಪಡೆದ ಎಂಬಿಬಿಎಸ್, ಎಂಡಿ ವೈದ್ಯಕೀಯ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ. ಪ್ರೋತ್ಸಾಹಧನ ದೊರೆಯುತ್ತಿದೆ. 60:40ರ ಅನುಪಾತದಲ್ಲಿ ರಾಜ್ಯ ಸರಕಾರದ ಪಾಲುದಾರಿಕೆಯೊಂದಿಗೆ 1500 ಪ್ರೋತ್ಸಾಹಧನ ಹೆಚ್ವಿಸಲು ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ತಿಳಿಹೇಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ’
-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ







