ಬೆಂಗಳೂರು | ಅಪಹರಣ, ದರೋಡೆ ಸೇರಿ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.17: ನಗರದ ವಿವಿಧ ಠಾಣೆಗಳಲ್ಲಿ ಅಪಹರಣ, ದರೋಡೆ ಸೇರಿದಂತೆ 25 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ಗಿರಿನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಸಿಂಗನಹಳ್ಳಿ ನಿವಾಸಿ ಯೋಗಾನಂದ(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿವೆ. ಆರೋಪಿಯು ಬೆಂಗಳೂರಿನ ಕೋಡಿಪಾಳ್ಯದಲ್ಲಿ ವಾಸವಾಗಿದ್ದುಕೊಂಡು ತನ್ನ ಸಹಚರನೊಂದಿಗೆ ದ್ವಿಚಕ್ರ ವಾಹನದಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಬೆದರಿಸಿ ಸರಗಳ್ಳತನ, ದರೋಡೆ ಮಾಡಿ ಪರಾರಿಯಾಗುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣದಲ್ಲಿ ಆರೋಪಿ ಯೋಗಾನಂದನನ್ನು ಬಂಧಿಸಲಾಗಿದೆ. ಈತನ ಪ್ರಾಥಮಿಕ ಹಂತದ ವಿಚಾರಣೆಯಲ್ಲಿ ನಗರದ ಕೋಣನಕುಂಟೆ, ಕೆ.ಎಸ್.ಲೇಔಟ್, ಗಿರಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಪ್ರಕರಣಗಳು ಪತ್ತೆಯಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಸುಮಾರು 6.54 ಲಕ್ಷ ರೂ. ಮೌಲ್ಯದ 75.62 ಗ್ರಾಂ ಚಿನ್ನಾಭರಣವನ್ನು ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





