ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ, ಸುಳ್ಳು ಸುದ್ದಿ | ಪ್ರಸಕ್ತ ವರ್ಷ 37 ಪ್ರಕರಣ ದಾಖಲು, 18 ಆರೋಪಿಗಳ ಬಂಧನ : ಸೀಮಂತ್ ಕುಮಾರ್ ಸಿಂಗ್

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.9: ಪ್ರಸಕ್ತ ವರ್ಷದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡ ಆರೋಪದ ಮೇಲೆ ಒಟ್ಟು 37 ಪ್ರಕರಣಗಳನ್ನು ದಾಖಲಿಸಲಾಗಿದ್ದು, 18 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಬಂಧಿತ ಆರೋಪಿಗಳಿಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿನ 41 ಖಾತೆಗಳು ಹಾಗೂ ಆರೋಪಿತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ 19 ಪೋಸ್ಟ್ ಗಳನ್ನು ತೆಗೆದುಹಾಕಲಾಗಿದೆ ಎಂದಿದ್ದಾರೆ.
ನಗರಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಪ್ರಚೋದನಾಕಾರಿ ಪೋಸ್ಟ್ ಗಳನ್ನು ಬಿತ್ತರಿಸಿ, ಸಮಾಜದ ಸ್ವಾಸ್ಥ್ಯವನ್ನು ಹದಗೆಡಿಸುವಂತಹ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಈ ರೀತಿ ನಿಗಾವಣೆ ಮಾಡುವ ಸಂದರ್ಭದಲ್ಲಿ ಕೆಲವು ಪ್ರಚೋದನಕಾರಿ ಪೋಸ್ಟ್ ಗಳು ಕಂಡುಬಂದಿದ್ದು, ಅದಕ್ಕೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸಾರ್ವಜನಿಕರು ಇಂತಹ ಪೋಸ್ಟ್ ಗಳಿಗೆ ಮನ್ನಣೆ ಕೊಡದೆ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು. ಈ ರೀತಿಯ ಪೋಸ್ಟ್ ಗಳಿಗೆ ಕಮೆಂಟ್ ಮಾಡುವುದಾಗಲಿ ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಪೂರ್ವಾಪರ ವಿಚಾರವನ್ನು ತಿಳಿದುಕೊಂಡು ಹಂಚಿಕೊಳ್ಳಬೇಕು. ಇಲ್ಲವಾದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.







